ದುನಿಯಾ ವಿಜಯ್ ನಾಯಕರಾಗಿ ನಟಿಸುತ್ತಿರುವ 29 ನೇ ಚಿತ್ರ ‘VK 29’. ಈ ಚಿತ್ರದ ಮೂಲಕ ತಮ್ಮ ಮಗಳನ್ನು ಚಂದನವನಕ್ಕೆ ಪರಿಚಯಿಸಲಿದ್ದಾರೆ ದುನಿಯಾ ವಿಜಯ್‌. ಈ ಸಿನಿಮಾಗಾಗಿ ಮೋನಿಕಾ ತಮ್ಮ ಹೆಸರನ್ನು ಬದಲಿಸಿಕೊಂಡಿದ್ದಾರೆ.

ಸ್ಯಾಂಡಲ್‌ವುಡ್‌ ಸ್ಟಾರ್‌ಗಳ ಮಕ್ಕಳು ಸಿನಿಮಾಗಳಲ್ಲಿ ನಟಿಸೋದು ಸಾಮಾನ್ಯ. ಇತ್ತೀಚೆಗಷ್ಟೆ ಮಾಲಾಶ್ರೀ ಅವರ ಮಗಳು ಆರಾಧನಾ ‘ಕಾಟೇರ’ ಚಿತ್ರದ ಮೂಲಕ ಚಂದನವನಕ್ಕೆ ಅದ್ಧೂರಿಯಾಗಿ ಎಂಟ್ರಿ ಕೊಟ್ಟಿದ್ದಾರೆ. ಈಗ ನಟ ದುನಿಯಾ ವಿಜಯ್‌ ಅವರ ಮಗಳು ಮೋನಿಕಾ ಮೊದಲ ಬಾರಿಗೆ ಬಣ್ಣ ಹಚ್ಚಲಿದ್ದಾರೆ. ನಟ ದರ್ಶನ್ ಅವರ ‘ಸಾರಥಿ’ ಚಿತ್ರವನ್ನು ನಿರ್ಮಿಸಿದ್ದ ಕೆ‌ ವಿ ಸತ್ಯಪ್ರಕಾಶ್ 12 ವರ್ಷಗಳ ನಂತರ ‘ಸಾರಥಿ ಫಿಲಂಸ್’ ಮೂಲಕ ಈ ಸಿನಿಮಾ ನಿರ್ಮಾಣಕ್ಕೆ ಮುಂದಾಗಿದ್ದಾರೆ. ಇದಕ್ಕೆ ಸತ್ಯಪ್ರಕಾಶ್ ಅವರ ಮಗ ಸೂರಜ್ ಗೌಡ ಅವರೂ ಜೊತೆಯಾಗಿದ್ದಾರೆ. ‘ಜಂಟಲ್ ಮ್ಯಾನ್’, ‘ಗುರುಶಿಷ್ಯರು’ ಚಿತ್ರಗಳ ನಿರ್ದೇಶಕ ಹಾಗೂ ‘ಕಾಟೇರ’ ಚಿತ್ರದ ಬರಹಗಾರ ಜಡೇಶ ಕೆ ಹಂಪಿ ಈ ಸಿನಿಮಾಗೆ ಆಕ್ಷನ್‌ ಕಟ್‌ ಹೇಳುತ್ತಿದ್ದಾರೆ. ದುನಿಯಾ ವಿಜಯ್ ನಾಯಕರಾಗಿ ನಟಿಸುತ್ತಿರುವ 29 ನೇ ಚಿತ್ರ ಇದಾಗಿದ್ದು, ಇದಕ್ಕೆ ಸದ್ಯಕ್ಕೆ ‘VK 29’ ಎಂದು ಶೀರ್ಷಿಕೆ ನೀಡಲಾಗಿದೆ.

ಬೆಂಗಳೂರು ಮಹಾಲಕ್ಷ್ಮೀಪುರದ ಶ್ರೀ ವೀರಾಂಜನೇಯಸ್ವಾಮಿ ದೇವಸ್ಥಾನದಲ್ಲಿ ನಡೆದ ಮುಹೂರ್ತ ಸಮಾರಂಭದಲ್ಲಿ ಶಾಸಕ ಗೋಪಾಲಯ್ಯ ಚಿತ್ರದ ಮೊದಲ ದೃಶ್ಯಕ್ಕೆ ಚಾಲನೆ ನೀಡಿದರು. ನಿರ್ದೇಶಕ ತರುಣ್ ಸುಧೀರ್ ಆಕ್ಷನ್ ಕಟ್ ಹೇಳಿದರು. ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಎನ್ ಎಂ ಸುರೇಶ್, ನಿರ್ಮಾಪಕರ ಸಂಘದ ಅಧ್ಯಕ್ಷ ಉಮೇಶ್ ಬಣಕಾರ್ ಸೇರಿದಂತೆ ಕನ್ನಡ ಚಿತ್ರರಂಗದ ಅನೇಕ ಗಣ್ಯರು ಮುಹೂರ್ತ ಸಮಾರಂಭದಲ್ಲಿ ಭಾಗವಹಿಸಿದ್ದರು. ರಚಿತಾರಾಮ್ ಈ ಸಿನಿಮಾದಲ್ಲಿ ನಾಯಕಿಯಾಗಿ ನಟಿಸುತ್ತಿದ್ದು, ದುನಿಯಾ ವಿಜಯ್ ಪುತ್ರಿ ರಿತನ್ಯಾ (ಮೋನಿಕಾ) ಈ ಚಿತ್ರದ ಮೂಲಕ ಚಿತ್ರರಂಗ ಪ್ರವೇಶಿಸುತ್ತಿದ್ದಾರೆ. ‘ಡೇರ್ ಡೆವಿಲ್ ಮುಸ್ತಫಾ’ ಖ್ಯಾತಿಯ ಶಿಶಿರ್ ಸಹ ಪ್ರಮುಖಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.

ನಿರ್ದೇಶಕ ಜಡೇಶ ಕೆ ಹಂಪಿ ಚಿತ್ರದ ಬಗ್ಗೆ ಮಾತನಾಡಿ, ‘ಇದು ನಾನು ಕಂಡು, ಕೇಳಿದ ಹಾಗೂ ನೋಡಿದ ನೈಜ ಕಥೆ. ಕೋಲಾರ ಭಾಗದಲ್ಲಿ ನಡೆಯುವ ಕಥೆಯಾಗುವುದರಿಂದ ಸಂಭಾಷಣೆ ಕೋಲಾರದ ಭಾಷೆಯಲ್ಲೇ ಇರುತ್ತದೆ. ಮಾಸ್ತಿ ಅವರು ಸಂಭಾಷಣೆ ಬರೆಯುತ್ತಿದ್ದಾರೆ. ಅವರು ಕೋಲಾರದವರೇ ಆಗಿರುವುದು ವಿಶೇಷ. ಇದು 90ರ ಕಾಲಘಟ್ಟದಲ್ಲಿ ನಡೆಯುವ ಕಥೆ. ಶಿವರಾಮ ಕಾರಂತರ ‘ಚೋಮನ ದುಡಿ’ಯ ಚೋಮನ ಪಾತ್ರ ಈ ಚಿತ್ರಕ್ಕೆ ಸ್ಪೂರ್ತಿ. ಹಾಗಂತ ‘ಚೋಮನ ದುಡಿ’ ಚಿತ್ರಕ್ಕೂ ಈ ಚಿತ್ರಕ್ಕೂ ಸಂಬಂಧವಿಲ್ಲ. ಬೆಂಗಳೂರಿನಲ್ಲಿ ಅದ್ದೂರಿ ಸೆಟ್ ಹಾಕಲಾಗುತ್ತಿದೆ. ಉಳಿದಂತೆ ಕೋಲಾರ, ಮೈಸೂರಿನಲ್ಲೂ ಚಿತ್ರೀಕರಣ ನಡೆಯಲಿದೆ. ನಾಯಕ ವಿಜಯ್ ಅವರು ವಿಭಿನ್ನ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಸ್ವಾಮಿ ಗೌಡ ಅವರ ಛಾಯಾಗ್ರಹಣ ಹಾಗೂ ಮಾಸ್ತಿ ಅವರ ಸಂಭಾಷಣೆ ಈ ಚಿತ್ರಕ್ಕಿದೆ’ ಎಂದು ಸಿನಿಮಾದ ಬಗ್ಗೆ ಮಾಹಿತಿ ಹಂಚಿಕೊಂಡರು.

ನಟ ವಿಜಯ್‌ ಮಾತನಾಡಿ, ‘ಈ ಚಿತ್ರದ ವಿಶೇಷವೆಂದರೆ ತಂದೆ – ಮಗ ನಿರ್ಮಿಸುತ್ತಿದ್ದಾರೆ. ತಂದೆ – ಮಗಳು ಅಭಿನಯಿಸುತ್ತಿದ್ದೇವೆ. ನನ್ನ ಮಗಳು ರಿತನ್ಯಾ, ಮುಂಬೈನ ಅನುಪಮ್ ಖೇರ್ ಇನ್‌ಸ್ಟಿಟ್ಯೂಟ್‌ನಲ್ಲಿ ಅಭಿನಯ ಕಲಿತು ಬಂದಿದ್ದಾಳೆ. ಈ ಚಿತ್ರದಲ್ಲೂ ನನ್ನ ಮಗಳ ಪಾತ್ರದಲ್ಲೇ ಅಭಿನಯಿಸುತ್ತಿದ್ದಾಳೆ. ನಾನು ಚಿತ್ರರಂಗಕ್ಕೆ ಬಂದು 30 ವರ್ಷ ಹಾಗೂ ನಾಯಕನಾಗಿ 18 ವರ್ಷಗಳಾಗಿದೆ. ಈ ಸಂದರ್ಭದಲ್ಲಿ ನನ್ನ ಮಗಳು ಚಿತ್ರರಂಗ ಪ್ರವೇಶಿಸುತ್ತಿದ್ದಾಳೆ. ಜಡೇಶ್ ಅವರು ಒಳ್ಳೆಯ ಕಥೆ ಮಾಡಿಕೊಂಡಿದ್ದಾರೆ. ನನ್ನ ಪಾತ್ರ ಕೂಡ ಚೆನ್ನಾಗಿದೆ. ಜಡೇಶ್ ಕನ್ನಡ ಚಿತ್ರರಂಗದ ಅತ್ಯುತ್ತಮ ನಿರ್ದೇಶಕರಾಗುವುದು ಖಂಡಿತ. ಬಹಳ ವರ್ಷಗಳ ನಂತರ ಸತ್ಯಪ್ರಕಾಶ್ ಅವರು ನಿರ್ಮಾಣಕ್ಕೆ ಮರಳಿದ್ದಾರೆ‌. ಅವರಿಗೆ ಹಾಗೂ ಇಡೀ ತಂಡಕ್ಕೆ ಒಳ್ಳೆಯದಾಗಲಿ’ ಎಂದಿದ್ದಾರೆ.

‘ಮೊದಲ ಚಿತ್ರ ಅಪ್ಪನ ಜೊತೆಗೆ ನಟಿಸುತ್ತಿರುವುದು ಖುಷಿಯಾಗಿದೆ. ಈ ಚಿತ್ರದಿಂದ ನನ್ನ ಹೆಸರನ್ನು ರಿತನ್ಯಾ ಎಂದು ಬದಲಿಸಿಕೊಂಡಿದ್ದೇನೆ. ನಿಮ್ಮೆಲ್ಲರ ಪ್ರೋತ್ಸಾಹ ನನಗಿರಲಿ’ ಎಂದರು ಬೆಂಬಲ ಕೋರಿದರು ಮೋನಿಕಾ. ‘ಸಾರಥಿ ಚಿತ್ರ ನನಗೆ ತುಂಬಾ ಕೀರ್ತಿ ತಂದುಕೊಟ್ಟ ಚಿತ್ರ. ಆನಂತರ ಕೆಲವು ಚಿತ್ರಗಳ ಕಥೆ ಕೇಳಿದ್ದೆ. ಕಾರಣಾಂತರದಿಂದ ನಿರ್ಮಿಸಲು ಆಗಿರಲಿಲ್ಲ. ಜಡೇಶ್ ಅವರ ಕಥೆ ಇಷ್ಟವಾಯಿತು. ಕೇವಲ 20 ದಿನಗಳಲ್ಲಿ ಚಿತ್ರ ಆರಂಭವಾಯಿತು. ನಿರ್ಮಾಣದಲ್ಲಿ ನನ್ನ ಜೊತೆಗೆ ಮಗ ಸೂರಜ್ ಗೌಡ ಇದ್ದಾರೆ. ನಮ್ಮ ಚಿತ್ರಕ್ಕೆ ನಿಮ್ಮೆಲ್ಲರ ಬೆಂಬಲವಿರಲಿ’ ಎಂದು ನಿರ್ಮಾಪಕ ಸತ್ಯಪ್ರಕಾಶ್ ತಿಳಿಸಿದ್ದಾರೆ.

LEAVE A REPLY

Connect with

Please enter your comment!
Please enter your name here