ಕನ್ನಡ ಚಲನಚಿತ್ರ ನಿರ್ಮಾಪಕರ ಸಂಘದ ನೂತನ ಕಟ್ಟಡ ಜೂನ್‌ 30ರಂದು ಉದ್ಘಾಟನೆಗೊಳ್ಳಲಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ನೂತನ ಕಟ್ಟಡ ಉದ್ಘಾಟಿಸಲಿದ್ದಾರೆ. ದಕ್ಷಿಣ ಭಾರತದಲ್ಲಿ ನಿರ್ಮಾಪಕರಿಗೆಂದೇ ಸ್ವಂತ ಕಟ್ಟಡ ಇರುವುದು ಕರ್ನಾಟಕದಲ್ಲಿ ಮಾತ್ರ ಎನ್ನಲಾಗಿದೆ.

ತಮ್ಮ ಸಂಘಕ್ಕೊಂದು ಸುಸಜ್ಜಿತ ಕಟ್ಟಡ ಬೇಕೆನ್ನುವ ಕನ್ನಡ ಚಿತ್ರನಿರ್ಮಾಪಕರ ಒತ್ತಾಸೆ ನನಸಾಗಿದೆ. ಬೆಂಗಳೂರು ಶಿವಾನಂದ ಸರ್ಕಲ್‌ ಬಳಿ ಕನ್ನಡ ಚಲನಚಿತ್ರ ನಿರ್ಮಾಪಕರ ಸಂಘದ ನೂತನ ಕಟ್ಟಡ ನಿರ್ಮಾಣವಾಗಿದ್ದು, ಇದೇ ಜೂನ್‌ 30ರಂದು ಕಟ್ಟಡ ಉದ್ಘಾಟನೆಗೊಳ್ಳಲಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನೂತನ ಕಟ್ಟಡ ಉದ್ಘಾಟಿಸಲಿದ್ದಾರೆ. ನಿರ್ಮಾಪಕರ ಸಂಘದ ಅಧ್ಯಕ್ಷ ಉಮೇಶ್ ಬಣಕಾರ್ ಈ ಬಗ್ಗೆ ಮಾತನಾಡಿ, ‘ಬಹಳ ಜನರ ಶ್ರಮದಿಂದ ನಿರ್ಮಾಪಕರ ಸಂಘದ ನೂತನ ಕಟ್ಟಡ ನಿರ್ಮಾಣವಾಗಿ, ಉದ್ಘಾಟನೆಗೊಳ್ಳುತ್ತಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ನೂತನ ಕಟ್ಟಡ ಉದ್ಘಾಟನೆ ಮಾಡಲಿದ್ದಾರೆ’ ಎಂದಿದ್ದಾರೆ.

ನಿರ್ಮಾಪಕರ ಸಂಘದ ಕಟ್ಟಡ ನಿರ್ಮಾಣ ಸಮಿತಿಯ ಅಧ್ಯಕ್ಷ ಸಾ ರಾ ಗೋವಿಂದು, ‘ಹೊಂಬಾಳೆ ಫಿಲಂಸ್‍, R S ಗೌಡ, ವಾಣಿಜ್ಯ ಮಂಡಳಿ ಸೇರಿದಂತೆ ಎಲ್ಲರ ಸಹಕಾರದಿಂದ ನೂತನ ಕಟ್ಟಡ ನಿರ್ಮಾಣವಾಗಿದೆ. ನಿರ್ಮಾಪಕ ರಮೇಶ್‌ ರೆಡ್ಡಿ ಕಟ್ಟಡ ನಿರ್ಮಾಣದ ಜವಾಬ್ದಾರಿ ಹೊತ್ತು ನೆರವಾಗಿದ್ದಾರೆ. ದಕ್ಷಿಣ ಭಾರತದಲ್ಲಿ ನಿರ್ಮಾಪಕರಿಗೆಂದೇ ಸ್ವಂತ ಕಟ್ಟಡ ಇರವುದು ಕರ್ನಾಟಕದಲ್ಲಿ ಮಾತ್ರ’ ಎನ್ನುತ್ತಾರೆ. ಉದ್ಘಾಟನಾ ಸಮಾರಂಭದಲ್ಲಿ ದಕ್ಷಿಣ ಭಾರತ ಚಲನಚಿತ್ರ ವಾಣಿಜ್ಯ ಮಂಡಳಿ ಸದಸ್ಯರು, ಫಿಲಂ ಫೆಡರೇಷನ್‌ ಆಫ್‌ ಇಂಡಿಯಾ ಪದಾಧಿಕಾರಿಗಳು, ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಸದಸ್ಯರು ಭಾಗವಹಿಸಲಿದ್ದಾರೆ.

LEAVE A REPLY

Connect with

Please enter your comment!
Please enter your name here